ಶಿವಮೊಗ್ಗ, ಸೆಪ್ಟೆಂಬರ್ 03: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿಗೆ ಅರ್ಹ ಫಲಾನುಭವಿಗಳಿಗೆ ವಿವಿಧ ಕಲ್ಯಾಣ ಯೋಜನೆಗಳಡಿ ಸೌಲಭ್ಯ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗಮದ ಮೂಲಕ ಜಾರಿಯಾಗುತ್ತಿರುವ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ಹೊಲಿಗೆ ಯಂತ್ರ ವಿತರಣೆ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಯಲ್ಲಿ ಬರುವ ಸಮುದಾಯಗಳ ಆಸಕ್ತರು ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇವುಗಳ ಉಪ ಸಮುದಾಯಗಳಿಗೆ ಪ್ರತ್ಯೇಕ ನಿಗಮಗಳಿರುವುದರಿಂದ ಅವುಗಳನ್ನು ಹೊರತುಪಡಿಸಿ, ಉಳಿದ ಸಮುದಾಯಗಳಿಗೆ ಈ ಸೌಲಭ್ಯ ಅನ್ವಯವಾಗಲಿದೆ).
ಮುಖ್ಯ ನಿಬಂಧನೆಗಳು
- ಅರ್ಜಿದಾರರ ಆಧಾರ್ ಸಂಖ್ಯೆಯು ಮೊಬೈಲ್ ಸಂಖ್ಯೆಗೆ ಜೋಡಣೆಯಾಗಿರಬೇಕು (Link) ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರುವುದು ಕಡ್ಡಾಯ.
- ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಯಾವುದಾದರೂ ಒಂದು ಯೋಜನೆಯಡಿ ಸೌಲಭ್ಯ ಪಡೆಯಲು ಅವಕಾಶವಿರುತ್ತದೆ.
- ಈ ಹಿಂದೆ ನಿಗಮದ ಯಾವುದೇ ಯೋಜನೆಯಲ್ಲಿ ಸೌಲಭ್ಯ ಪಡೆದಿದ್ದರೆ, ಅಂತಹವರು ಹಾಗೂ ಅವರ ಕುಟುಂಬದವರು ಮತ್ತೆ ಅರ್ಜಿ ಸಲ್ಲಿಸಲು ಅರ್ಹರಲ್ಲ.
- ವಿಶೇಷವಾಗಿ ೨೦೨೪-೨೫ ಮತ್ತು ೨೦೨೫-೨೬ನೇ ಸಾಲಿನಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪುನಃ ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.
ಅರ್ಜಿ ಸಲ್ಲಿಕೆ ಹೇಗೆ? ಆಸಕ್ತ ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ (http://sevasindhu.karnataka.gov.in) ಮೂಲಕ ಅಥವಾ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ಸೂಕ್ತ ದಾಖಲೆಗಳೊಂದಿಗೆ ಸೆಪ್ಟೆಂಬರ್ ೩೦ರ ಒಳಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಅಧಿಕೃತ ವೆಬ್‌ಸೈಟ್ http://dbcdo.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಭಾಗ್ಯನಿಲಯ, ೧ನೇ ತಿರುವು, ಗಾಂಧಿನಗರ, ಶಿವಮೊಗ್ಗ (ದೂರವಾಣಿ ಸಂಖ್ಯೆ: 08182-229634) ಕಚೇರಿಯನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.



More Stories
ಏಥರ್ ‘ಕೋನಾರ್ಕ್’ ಇವಿ ಸ್ಕೂಟರ್ ಬಿಡುಗಡೆ: ಬೆಲೆ ₹99,999
ಪತ್ನಿ ನಾಗರತ್ನಗೆ ವಿಚ್ಛೇದನ: ‘ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ’ ಎಂದ ನಟ ದುನಿಯಾ ವಿಜಯ್
CBSE ಕ್ಲಸ್ಟರ್ ಅಥ್ಲೆಟಿಕ್ಸ್: ಶಿವಮೊಗ್ಗ ಪೋದಾರ್ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ, ರಾಷ್ಟ್ರಮಟ್ಟಕ್ಕೆ ಆಯ್ಕೆ