ಶಿವಮೊಗ್ಗ, ಆ.22: ನಗರದ ಪ್ರಮುಖ ಸಾರ್ವಜನಿಕ ವಿಶ್ರಾಂತಿ ತಾಣವಾಗಿರುವ ಗಾಂಧಿ ಪಾರ್ಕ್‌ನ ಮೂಲಸೌಕರ್ಯಗಳನ್ನು ಸುಧಾರಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಶನಿವಾರ ಬೆಳಗ್ಗೆ ಗಾಂಧಿ ಪಾರ್ಕ್‌ಗೆ ಭೇಟಿ ನೀಡಿದ ಶಾಸಕರು, ಹಲವು ದಿನಗಳಿಂದ ಸ್ಥಗಿತಗೊಂಡಿರುವ ಹಾಗೂ ದುರಸ್ತಿ ಅಗತ್ಯವಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ಬಳಿಕ ಅಧಿಕಾರಿಗಳಿಂದ ಕಾಮಗಾರಿಗಳ ಪ್ರಗತಿ ಹಾಗೂ ಸ್ಥಿತಿಗತಿ ಕುರಿತು ಮಾಹಿತಿ ಪಡೆದುಕೊಂಡರು.
ಫೌಂಟೆನ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ
ಅರ್ಧಕ್ಕೆ ಸ್ಥಗಿತಗೊಂಡಿರುವ ಫೌಂಟೆನ್ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಿ ಪಾರ್ಕ್‌ನ ಸೌಂದರ್ಯವನ್ನು ಹೆಚ್ಚಿಸುವಂತೆ ಶಾಸಕರು ಸೂಚಿಸಿದರು. ಪಾರ್ಕ್‌ಗೆ ಆಗಮಿಸುವ ಸಾರ್ವಜನಿಕರು ಹಾಗೂ ಮಕ್ಕಳಿಗೆ ಅನುಕೂಲವಾಗುವಂತೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈಜುಕೊಳ ಸಾರ್ವಜನಿಕರ ಬಳಕೆಗೆ
ಗಾಂಧಿ ಪಾರ್ಕ್‌ನಲ್ಲಿರುವ ಈಜುಕೊಳವನ್ನು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಸಾರ್ವಜನಿಕರ ಸದ್ಬಳಕೆಗೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಚನ್ನಬಸಪ್ಪ ಸೂಚಿಸಿದರು.
ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿರುವ ಮಕ್ಕಳ ರೈಲನ್ನು ದುರಸ್ತಿಗೊಳಿಸಿ ಮತ್ತೆ ಬಳಕೆಗೆ ತರಬೇಕು. ಹಾಳಾಗಿರುವ ಆಟಿಕೆಗಳನ್ನು ಬದಲಾಯಿಸಿ ಮಕ್ಕಳಿಗೆ ಸುರಕ್ಷಿತ ಸೌಲಭ್ಯ ಕಲ್ಪಿಸಬೇಕು ಎಂದು ಅವರು ಹೇಳಿದರು.
ವಾಣಿಜ್ಯ ಮಳಿಗೆ, ಕೊಳ ಅಭಿವೃದ್ಧಿಗೂ ಆದ್ಯತೆ
ಪಾರ್ಕ್‌ನಲ್ಲಿ ಈಗಾಗಲೇ ನಿರ್ಮಿಸಲಾಗಿರುವ ವಾಣಿಜ್ಯ ಮಳಿಗೆಗಳನ್ನು ಸಾರ್ವಜನಿಕರು ಹಾಗೂ ವ್ಯಾಪಾರಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಅಭಿವೃದ್ಧಿಪಡಿಸುವಂತೆ ಸೂಚಿಸಲಾಯಿತು.
ಅದೇ ರೀತಿ, ಪಾರ್ಕ್‌ನೊಳಗಿನ ಕೊಳವನ್ನು ಸ್ವಚ್ಛಗೊಳಿಸಿ ಅಗತ್ಯ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
ಗಾಂಧಿ ಪಾರ್ಕ್‌ನ ಸರ್ವಾಂಗೀಣ ಅಭಿವೃದ್ಧಿ, ಸ್ವಚ್ಛತೆ ಹಾಗೂ ನಿರ್ವಹಣೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು. ಕೈಗೆತ್ತಿಕೊಂಡಿರುವ ಎಲ್ಲ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಉತ್ತಮ ಸೌಲಭ್ಯ ಒದಗಿಸಬೇಕು ಎಂದು ಶಾಸಕ ಚನ್ನಬಸಪ್ಪ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜ್ಞಾನೇಶ್ವರ್, ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಪ್ರಭಾಕರ್, ಪಾಲಿಕೆಯ ಹಿರಿಯ ಎಂಜಿನಿಯರ್‌ಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.



More Stories
ಅಂತರರಾಷ್ಟ್ರೀಯ ಹೃದ್ರೋಗ ತಜ್ಞರ ಸಮ್ಮೇಳನದಲ್ಲಿ ಡಾ. ಶರತ್ ಸಂಗನಗೌಡರ್ ಅವರಿಗೆ ಪ್ರಶಸ್ತಿ
ವೃತ್ತಿಯ ಜೊತೆಗೆ ಸಮಾಜ ಸೇವೆಯೂ ಮುಖ್ಯ: ಶಿಕ್ಷಕಿ ತುಳಸಿ ಅಡಿಗ
ಮಣ್ಣಲ್ಲಿ ಮಣ್ಣಾಗುವ ಕಣ್ಣುಗಳು ಮತ್ತೊಬ್ಬರ ಬಾಳಿಗೆ ಬೆಳಕಾಗಲಿ: ವಿ. ನಾಗರಾಜ್